ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ವಾಗ್ದಾಳಿ

ಬೆಲೆ ಏರಿಕೆ: ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ವಾಗ್ದಾಳಿ

Share

ಕಳಪೆ ಮಟ್ಟದ ಆರ್ಥಿಕ ನಿರ್ವಹಣೆಯಿಂದಾಗಿ ದೇಶದಲ್ಲಿ ಬಡತನ ಹೆಚ್ಚಾಗುತ್ತಿದೆ ಎಂದು ಕೇಂದ್ರ ಸರ್ಕಾರದ ವಿರುದ್ಧ ಎಐಸಿಸಿ ವಕ್ತಾರೆ ಸುಪ್ರಿಯಾ ಶ್ರೀನಾಟೆ ವಾಗ್ದಾಳಿ ನಡೆಸಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಮಹಿಳಾ ಮುಖಂಡರೊಂದಿಗೆ ಚರ್ಚಿಸಿದ ಬಳಿಕ ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಕೇಂದ್ರದ ಬಿಜೆಪಿ ಸರ್ಕಾರದ ವಿರುದ್ಧ ತೀವ್ರವಾಗಿ ಕಿಡಿಕಾರಿದರು.

ಅಗತ್ಯ ವಸ್ತುಗಳ ಬೆಲೆ ಏರಿಕೆ ಮೂಲಕ ಕೇಂದ್ರದ ಬಿಜೆಪಿ ಸರಕಾರ ಜನಸಾಮಾನ್ಯರಿಗೆ ಗಾಯದ ಮೇಲೆ ಬರೆ ಎಳೆಯುತ್ತಿದೆ. ಆರ್ಥಿಕ ಬಿಕ್ಕಟ್ಟು ಹಾಗೂ ಪಿಡುಗಿನ ಸಮಯದಲ್ಲಿ ಹಣದುಬ್ಬರ ಜನಸಾಮಾನ್ಯರಿಗೆ ಹೊರೆಯಾಗಿದೆ. ಸರಕಾರದ ದುರಾಸೆ ಹಾಗೂ ಶೋಷಣೆಯಿಂದ ಇಂಧನ ತೈಲ ಬೆಲೆ ಏರಿಕೆ ಹೆಚ್ಚುತ್ತಿದೆ.

ದಿನಬಳಕೆ ವಸ್ತುಗಳ ಮೇಲೆ ಅತಿಯಾದ ಜಿಎಸ್ಟಿಯಿಂದ ಜನ ಸಾಮಾನ್ಯ ಸಂಕಷ್ಟಕ್ಕೆ ಸಿಲುಕಿದ್ದಾನೆ. ಹಣದುಬ್ಬರ ವಿಚಾರವನ್ನು ಕಾಂಗ್ರೆಸ್ ಸಂಸತ್ ಸದನದಲ್ಲಿ ಪ್ರಸ್ತಾಪಿಸಲಿದೆ. ಇಂಧನ ತೈಲ ಬೆಲೆ ಇಳಿಸಬೇಕು, ಆಮದು ಸುಂಕ ಹಾಗೂ ಜಿಎಸ್ಟಿ ಪ್ರಮಾಣ ಕಡಿಮೆ ಮಾಡಬೇಕು ಎಂದು ಆಗ್ರಹಿಸಿದ್ದಾರೆ.

ಆರ್ಥಿಕ ಬಿಕ್ಕಟ್ಟು ಹಾಗೂ ಪಿಡುಗಿನ ಸಮಯದಲ್ಲಿ ಜನಸಾಮಾನ್ಯರು ತತ್ತರಿಸಿದ್ದು, ಈ ಮಧ್ಯೆ ಬೆಲೆ ಏರಿಕೆ ಗಾಯದ ಮೇಲೆ ಬರೆ ಎಳೆದಿದೆ. ಜನ ಭಯಾನಕ ವೈರಸ್ ಹಾಗೂ ಮೋದಿ ಸರಕಾರದ ಆರ್ಥಿಕ ದುರಾಡಳಿತದ ವಿರುದ್ಧ ಹೋರಾಟ ಮಾಡಬೇಕಾದ ಸ್ಥಿತಿ ನಿರ್ಮಾಣವಾಗಿದೆ. ಇದರಿಂದ ಉದ್ಯೋಗ ನಷ್ಟ, ವೇತನ ಕಡಿತವಾಗಿದೆ. ಈ ಪರಿಸ್ಥಿತಿಯಲ್ಲಿ ಜನರ ಕೈಗೆ ಹಣ ನೀಡಬೇಕಾದ ಸರಕಾರ ಅಗತ್ಯ ವಸ್ತುಗಳ ಬೆಲೆ ಹೆಚ್ಚಳಕ್ಕೆ ಕಾರಣವಾಗಿ ಬೇಜವಾಬ್ದಾರಿ ತೋರುತ್ತಿದೆ ಎಂದು ಕಿಡಿಕಾರಿದ್ದಾರೆ.

ಯುಪಿಎ ಸರ್ಕಾರದ ಉತ್ತಮ ಕೆಲಸದ ಮೂಲಕ ದೇಶದ 27 ಕೋಟಿ ಜನರನ್ನು ಬಡತನ ರೇಖೆಗಿಂತ ಹೊರಕ್ಕೆ ತಂದಿತ್ತು. ಆದರೆ ಬಿಜೆಪಿ ಸರ್ಕಾರದ ದುರಾಡಳಿತ ದೇಶದ 23 ಕೋಟಿ ಜನ ಬಡತನ ರೇಖೆಗಿಂತ ಕೆಳಕ್ಕೆ ದೂಡಿದೆ. ಕಳೆದ ವರ್ಷ ಎಪ್ರಿಲ್ ಮತ್ತು ಮೇ ತಿಂಗಳಲ್ಲಿ 2 ಕೋಟಿ ಜನ ಉದ್ಯೋಗ ಕಳೆದುಕೊಂಡಿದ್ದಾರೆ. ದೇಶದ ಶೇ.97ರಷ್ಟು ಜನ ಕಡಿಮೆ ವೇತನ ಪಡೆಯುವಂತಾಗಿದೆ. ಪರಿಣಾಮ ಭಾರತೀಯರು 1.25 ಲಕ್ಷ ಕೋಟಿ ರೂ.ಕಾರ್ಮಿಕ ನಿಧಿ ಹಣ ಪಡೆಯುವಂತಾಗಿದೆ.

ದೇಶದ ಜಿಡಿಪಿ ಕುಸಿಯುತ್ತಿರುವಾಗ ಹಣದುಬ್ಬರ ಮಹಾಪರಾಧ. ಜನರ ಆದಾಯ ಕುಸಿದಿರುವಾಗ ಅಗತ್ಯ ವಸ್ತುಗಳ ಮೇಲೆ ಹೆಚ್ಚು ವ್ಯಯಿಸುವಂತೆ ಮಾಡುವಂತಾಗಿದೆ. ಇದು ಕೇವಲ ಪೆಟ್ರೋಲ್, ಡೀಸೆಲ್, ಅಡುಗೆ ಅನಿಲದ ವಿಚಾರ ಮಾತ್ರವಲ್ಲ. ಅಡುಗೆ ಎಣ್ಣೆ, ಬೇಳೆ ಕಾಳುಗಳು, ಚಹಾ, ಕಾಫಿ, ಸೋಪುಗಳ ಬೆಲೆ ಕೂಡ ಹೆಚ್ಚಾಗಿವೆ. ಇತ್ತೀಚಿನ ಹಣದುಬ್ಬರ ಸಂಖ್ಯೆ ಎಚ್ಚರಿಕೆ ಗಂಟೆಯಾಗಿದೆ. ಚಿಲ್ಲರೆ ಹಣದುಬ್ಬರವು ಆರ್ ಬಿ ಐನ ಗುರಿ ಶೇ.6ಕ್ಕಿಂತ ಹೆಚ್ಚಾಗಿದ್ದು, ಶೇ.6.3ರಷ್ಟು ತಲುಪಿದೆ ಎಂದು ತಿಳಿಸಿದ್ದಾರೆ.

ಮೋದಿ ಸರ್ಕಾರ ಜನರಿಗೆ ದ್ರೋಹ ಬಗೆದಿದೆ. ಅತಿಯಾದ ಹಣದುಬ್ಬರಕ್ಕೆ ಅತಿಯಾದ ಬೇಡಿಕೆ ಅಥವಾ ಜನರ ಕೈಯಲ್ಲಿ ಹೆಚ್ಚಿನ ಹಣವಿರುವ ಕಾರಣದಿಂದ ಉಂಟಾಗಿಲ್ಲ. ಬದಲಿಗೆ ಜನರ ಆದಾಯ ಕುಸಿದು ಜನರ ಕೈಯಲ್ಲಿ ಹಣವಿಲ್ಲದಂತಾಗಿದೆ. ಈ ಪರಿಸ್ಥಿತಿಯಲ್ಲಿ ಬೆಲೆ ಏರಿಕೆಗೆ ಕಾರಣವಾಗಿರುವುದು ಸರಕಾರದ ಶೋಷಣೆ, ದುರಾಸೆ ಹಾಗೂ ಆರ್ಥಿಕತೆ ನಿರ್ವಹಣೆಯಲ್ಲಿನ ವೈಫಲ್ಯವಾಗಿದೆ.

ಜನರ ಮೇಲಿನ ಹೊರೆ ಇಳಿಸಲು ಸರ್ಕಾರ ಕೂಡಲೇ ಪೆಟ್ರೋಲ್, ಡೀಸೆಲ್ ಹಾಗೂ ಎಲ್ ಪಿಜಿ ಬೆಲೆ ಇಳಿಸಬೇಕು. ಆಮದು ಸುಂಕ ಪರಿಶೀಲಿಸಬೇಕು. ದಿನಬಳಕೆ ವಸ್ತುಗಳ ಮೇಲಿನ ಜಿಎಸ್ಟಿ ದರ ಇಳಿಸಬೇಕು ಎಂದು ಕಾಂಗ್ರೆಸ್ ಆಗ್ರಹಿಸುತ್ತದೆ. ಈ ಎಲ್ಲ ವಿಚಾರಗಳ ಬಗ್ಗೆ ಸಂಸತ್ ಅಧಿವೇಶನದಲ್ಲಿ ವಿಸ್ತೃತ ಚರ್ಚೆ ಜತೆಗೆ ಜನರಿಗೆ ಪರಿಹಾರ ನೀಡುವಂತೆ ಕಾಂಗ್ರೆಸ್ ಆಗ್ರಹಿಸಲಿದೆ ಸುಪ್ರಿಯಾ ಶ್ರೀನಾಟೆ ಹೇಳಿದ್ದಾರೆ.


Share

Leave a Reply

Your email address will not be published. Required fields are marked *