ಹುಬ್ಬಳ್ಳಿ: ಹುಬ್ಬಳ್ಳಿಯಲ್ಲಿ ಹದಗೆಟ್ಟಿರುವ ಕಾನೂನು ಸುವ್ಯವಸ್ಥೆ ಮತ್ತು ವಿಪರೀತ ಮಾದಕ ದ್ರವ್ಯ ದಂಧೆಯೇ ನೇಹಾ ಹಿರೇಮಠ ಮತ್ತು ಅಂಜಲಿ ಹತ್ಯೆಗೆಕಾರಣ ಎಂದು ಬಿಜೆಪಿ ಹಿರಿಯ ಮುಖಂಡ ಬಸನಗೌಡ ಪಾಟೀಲ್ ಯತ್ನಾಳ್ ಆರೋಪಿಸಿದ್ದಾರೆ.
ಹತ್ಯೆಗೀಡಾದ ಇಬ್ಬರು ಯುವತಿಯರ ಕುಟುಂಬಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಯತ್ನಾಳ್, ಗೃಹ ಸಚಿವ ಜಿ ಪರಮೇಶ್ವರ ಅವರು ತಮ್ಮನ್ನು ರಕ್ಷಿಸಿಕೊಳ್ಳುವ ಸಲುವಾಗಿ ಹಾಗೂ ಸರ್ಕಾರದ ವೈಫಲ್ಯವನ್ನು ಮುಚ್ಚುವ ತರಾತುರಿಯಲ್ಲಿ ನಾಲ್ವರು ಉನ್ನತ ಪೊಲೀಸ್ ಸಿಬ್ಬಂದಿಯನ್ನು ಅಮಾನತುಗೊಳಿಸಿದ್ದಾರೆ ಎಂದು ಹೇಳಿದರು. ಪರಮೇಶ್ವರ್ ಅವರಿಗೆ ಗೃಹ ಖಾತೆ ನಿಭಾಯಿಸಲು ಸಾಧ್ಯವಾಗದಿದ್ದರೆ ರಾಜೀನಾಮೆ ನೀಡಿ ಬೇರೆ ಇಲಾಖೆಯನ್ನು ವಹಿಸಿಕೊಳ್ಳಲಿ ಎಂದು ಕಿಡಿಕಾರಿದರು.
ಪೊಲೀಸರು ತೀವ್ರ ಒತ್ತಡದಲ್ಲಿ ಕೆಲಸ ಮಾಡುತ್ತಿದ್ದಾರೆ, ರಾಜ್ಯದಾದ್ಯಂತ ಮಾದಕ ವಸ್ತುಗಳ ಮಾರಾಟ ನಡೆಯುತ್ತಿದ್ದರೂ ಸರಕಾರ ಯಾವುದೇ ಕ್ರಮ ಕೈಗೊಂಡಿಲ್ಲ. ಸರ್ಕಾರ ಕೇವಲ ಆಶ್ವಾಸನೆಗಳನ್ನು ನೀಡುತ್ತದೆಯೇ ಹೊರತು ಯಾವುದೇ ಕ್ರಮ ಕೈಗೊಳ್ಳುತ್ತಿಲ್ಲ ಎಂದು ಆರೋಪಿಸಿದರು.ಸರ್ಕಾರ ಮೃತರ ಕುಟುಂಬಕ್ಕೆ ಭದ್ರತೆ ನೀಡುವ ಬದಲು ಆರೋಪಿಗಳಿಗೆ ರಕ್ಷಣೆ ನೀಡುತ್ತಿದೆ ಎಂದು ಆರೋಪಿಸಿದರು. ಮುಂಗಾರು ಅಧಿವೇಶನದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವಲ್ಲಿ ಸರ್ಕಾರದ ವೈಫಲ್ಯದ ಬಗ್ಗೆ ಚರ್ಚೆ ನಡೆಸಲಾಗುವುದು ಎಂದರು. ಹಿಂದಿನ ಬಿಜೆಪಿ ಸರಕಾರವನ್ನು ಗುರಿಯಾಗಿಸಿಕೊಂಡು, ಡಿ.ಜೆ.ಹಳ್ಳಿ ಮತ್ತು ಕೆ.ಜೆ.ಹಳ್ಳಿ ಗಲಭೆಯಲ್ಲಿ ತಪ್ಪಿತಸ್ಥರ ವಿರುದ್ಧ ಕಠಿಣ ಕ್ರಮ ಕೈಗೊಂಡಿದ್ದರೆ ಕಾನೂನು ಸುವ್ಯವಸ್ಥೆ ಇಷ್ಟೊಂದು ಹದಗೆಡುತ್ತಿರಲಿಲ್ಲ.
ಕಾಂಗ್ರೆಸ್ ಸರ್ಕಾರದ ಐದು ಖಾತ್ರಿಗಳು ಜಾರಿಯಾದ ನಂತರ ಜಿಲ್ಲೆಯ ಸಚಿವರು, ಶಾಸಕರ ಆದಾಯ ಬತ್ತಿ ಹೋಗಿದ್ದು, ಡ್ರಗ್ಸ್ ದಂಧೆಕೋರರಿಂದ ಹಣ ವಸೂಲಿ ಮಾಡುತ್ತಿದ್ದಾರೆ ಎಂದು ಆರೋಪಿಸಿದರು.