ಕಲಬುರಗಿ:– ಮಹರ್ಷಿ ವಾಲ್ಮೀಕಿ ಎಸ್‍ಟಿ ಅಭಿವೃದ್ಧಿ ನಿಗಮದಲ್ಲಿನ 187 ಕೋಟಿ ದುರ್ಬಳಕೆ ಪ್ರಕರಣದ ತನಿಖೆಯನ್ನು ಸಿಬಿಐಗೆ ವಹಿಸಲು ಆಗ್ರಹಿಸಿ ಬಿಜೆಪಿ ನಗರದಲ್ಲಿ ಇಂದು ಬೃಹತ್ ಪ್ರತಿಭಟನೆ ನಡೆಸಿತು.ಶಾಸಕರಾದ ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ್, ಬಿಜೆಪಿ ಗ್ರಾಮಾಂತರ ಜಿಲ್ಲಾಧ್ಯಕ್ಷ ಶಿವರಾಜ ಪಾಟೀಲ ರದ್ದೇವಾಡಗಿ, ನಗರ ಅಧ್ಯಕ್ಷ ಚಂದು ಪಾಟೀಲ, ಮುಖಂಡರಾದ ಅಮರನಾಥ ಪಾಟೀಲ ಅವರ ನೇತೃತ್ವದಲ್ಲಿ ಪಕ್ಷದ ಕಾರ್ಯಕರ್ತರು ನಗರದ ಸರ್ದಾರ ವಲ್ಲಭಭಾಯಿ ಪಟೇಲ್ ವೃತ್ತದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನೆ ನಡೆಸಿ ಜಿಲ್ಲಾಧಿಕಾರಿಗಳ ಕಚೇರಿಗೆ ಮುತ್ತಿಗೆ ಹಾಕಲು ಯತ್ನಿಸಿದರು. ಈ ವೇಳೆ ಪೊಲೀಸರು ಪ್ರತಿಭಟನಾಕಾರರನ್ನು ತಡೆದು ಶಾಸಕರಾದ ಬಸವರಾಜ ಮತ್ತಿಮೂಡ, ಡಾ.ಅವಿನಾಶ ಜಾಧವ್, ಶಿವರಾಜ ಪಾಟೀಲ ರದ್ದೇವಾಡಗಿ, ಚಂದು ಪಾಟೀಲ ಸೇರಿದಂತೆ ಮತ್ತಿತರರನ್ನು ವಶಕ್ಕೆ ಪಡೆದರು.ಪರಿಶಿಷ್ಟ ಪಂಗಡದವರ ಕಲ್ಯಾಣಕ್ಕೆ ಬಿಡುಗಡೆಯಾದ ಹಣದ ಅವ್ಯವಹಾರ ನಡೆಸಿ ಕಾಂಗ್ರೆಸ್ ಸರ್ಕಾರ ಪರಿಶಿಷ್ಟ ಪಂಗಡಕ್ಕೆ ದ್ರೋಹ ಮಾಡಿದೆ. ಸಂವಿಧಾನದ ಆಶಯಕ್ಕೆ ವಿರುದ್ಧವಾಗಿ ಹಿಂದುಳಿದ ವರ್ಗಗಳ ಸಮುದಾಯದ ವಿವಿಧ ಅಭಿವೃದ್ಧಿ ಯೋಜನೆಗಳಿಗೆ ಮೀಸಲಿರಿಸಿದ್ದ ಸಾವಿರಾರು ಕೋಟಿ ರೂ.ಗಳನ್ನು ಕಾಂಗ್ರೆಸ್ ಸರ್ಕಾರ ಇತರೆ ಯೋಜನೆಗಳಿಗೆ ಬಳಸಿಕೊಂಡಿರುವುದು ಆ ಸಮುದಾಯಕ್ಕೆ ಮಾಡಿದ ಅನ್ಯಾಯವಾಗಿದೆ ಎಂದು ಪ್ರತಿಭಟನೆ ನಡೆಸಿದ ಮುಖಂಡು ಆರೋಪಿಸಿದರು.
ಪಕ್ಷದ ಮುಖಂಡರು, ಕಾರ್ಯಕರ್ತರು ಪ್ರತಿಭಟನೆಯಲ್ಲಿ ಭಾಗವಹಿಸಿದ್ದರು.
ವರದಿ-ಡಾ ಎಂ ಬಿ ಹಡಪದ ಸುಗೂರ ಎನ್