ಮಳೆ ಹಾನಿ ತಡೆಗೆ ನಗರಕ್ಕೆ 1 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

ಮಳೆ ಹಾನಿ ತಡೆಗೆ ನಗರಕ್ಕೆ 1 ಸಾವಿರ ಕೋಟಿ ರೂ. ಅನುದಾನ ಬಿಡುಗಡೆ ಮಾಡಿ: ಸರ್ಕಾರಕ್ಕೆ ಬಿಜೆಪಿ ಆಗ್ರಹ

Share

ಬೆಂಗಳೂರು: ರಾಜ್ಯ ರಾಜಧಾನಿ ಬೆಂಗಳೂರು ಅಭಿವೃದ್ಧಿಗೆ ಕೂಡಲೇ 1,000 ಕೋಟಿ ರೂ. ಹಣ ಬಿಡುಗಡೆ ಮಾಡಬೇಕು. ಮಳೆ ಬರುವ ಮುನ್ನವೇ ಮುನ್ನೆಚ್ಚರಿಕೆ ಕ್ರಮಗಳನ್ನು ವಹಿಸಲು ಅಗತ್ಯ ಕಾಮಗಾರಿಗಳನ್ನು ನಡೆಸಬೇಕು ಎಂದು ಸರ್ಕಾರಕ್ಕ ಬಿಜೆಪಿ ಆಗ್ರಹಿಸಿದೆ.

ಫ್ರೀಡಂ ಪಾರ್ಕ್‌ನಲ್ಲಿ ಪ್ರತಿಭಟನೆಯ ನೇತೃತ್ವ ವಹಿಸಿ ಮಾತನಾಡಿದ ಆರ್.ಅಶೋಕ್, ಕಾಂಗ್ರೆಸ್‌ ಸರ್ಕಾರ ಬೆಂಗಳೂರನ್ನು ಕಡೆಗಣಿಸಿದೆ. ರಸ್ತೆಗಳಲ್ಲಿ ಗುಂಡಿ, ಕಸದ ರಾಶಿ ಎಲ್ಲೆಡೆ ಕಾಣುತ್ತಿದೆ. ಪೌರ ಕಾರ್ಮಿಕರಿಗೆ ಹಾಗೂ ಗುತ್ತಿಗೆದಾರರಿಗೆ ನೀಡಲು ಹಣವಿಲ್ಲ. ರಾಜಧಾನಿಯಲ್ಲಿ ಒಂದೇ ಒಂದು ರೂಪಾಯಿ ಕಾಮಗಾರಿ ನಡೆದಿಲ್ಲ. ಮುಖ್ಯಮಂತ್ರಿ ಹಾಗೂ ಉಪ ಮುಖ್ಯಮಂತ್ರಿ ನಗರ ವೀಕ್ಷಣೆ ಮಾಡಿದ್ದಾರೆಯೇ ಹೊರತು, ಅಭಿವೃದ್ಧಿಗೆ ಹಣ ನೀಡಿಲ್ಲ ಎಂದು ಆರೋಪಿಸಿದರು.ನಗರವಾಸಿಗಳು ಈಗ ನಮ್ಮ ತೆರಿಗೆ ನಮ್ಮ ಹಕ್ಕು ಎಂದು ಹೇಳುತ್ತಿದ್ದಾರೆ. ಬೆಂಗಳೂರು ಜನರು ಅತ್ಯಧಿಕ ತೆರಿಗೆ ಪಾವತಿಸುತ್ತಿದ್ದಾರೆ. ರಾಜ್ಯದ ಒಟ್ಟು ತೆರಿಗೆಯಲ್ಲಿ ಅತಿ ಹೆಚ್ಚು ಪಾಲು ಬೆಂಗಳೂರಿಂದ ಬರುತ್ತದೆ. ಬ್ರ್ಯಾಂಡ್‌ ಬೆಂಗಳೂರು ಎಂದು ಹೇಳಿ, ಕಾಂಗ್ರೆಸ್‌ ಸರ್ಕಾರ ಬ್ಯಾಡ್‌ ಬೆಂಗಳೂರು, ಕ್ರೈಂ ಬೆಂಗಳೂರು ಹಾಗೂ ಕಸದ ರಾಶಿಯ ಬೆಂಗಳೂರನ್ನು ನೀಡಿದೆ. ಮಳೆಗಾಲ ಆರಂಭವಾಗುವ ಮುನ್ನವೇ ಸರ್ಕಾರ ಎಚ್ಚೆತ್ತು 1 ಸಾವಿರ ಕೋಟಿ ರೂಪಾಯಿಯನ್ನು ಬಿಡುಗಡೆ ಮಾಡಿ ಏನೂ ಅನಾಹುತವಾಗದಂತೆ ಕ್ರಮ ವಹಿಸಬೇಕೆಂದು ಎಂದು ಆಗ್ರಹಿಸಿದರು.

ಇದೇ ವೇಳೆ ವಾಲ್ಮೀಕಿ ಅಭಿವೃದ್ಧಿ ನಿಗಮದಲ್ಲಿ ಅಧಿಕಾರಿ ಆತ್ಮಹತ್ಯೆ ಮಾಡಿಕೊಂಡಿದ್ದ ಪ್ರಕರಣ ಸಂಬಂಧ ಮಾತನಾಡಿ, ಇದಕ್ಕೆ ಸಚಿವರೇ ಕಾರಣರಾಗಿದ್ದಾರೆ. ಲಂಚ ತೆಗೆದುಕೊಂಡಿದ್ದರೆ ರಾಜೀನಾಮೆ ನೀಡುತ್ತೇನೆ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದರು. ಇಲ್ಲಿ 187 ಕೋಟಿ ರೂ. ಹಗರಣ ನಡೆದಿದ್ದು, ಇದಕ್ಕೆ ಯಾರೆಲ್ಲ ಕಾರಣವೆಂದು ಅಧಿಕಾರಿ ಡೆತ್‌ನೋಟ್‌ನಲ್ಲಿ ಉಲ್ಲೇಖಿಸಿದ್ದಾರೆ. ಇದರಲ್ಲಿ ಕೇವಲ ಸಚಿವರಲ್ಲದೆ, ಮುಖ್ಯಮಂತ್ರಿ ಹಾಗೂ ಇಡೀ ಸಂಪುಟದವರೇ ಲೂಟಿ ಮಾಡಿದ್ದಾರೆ. ಇದಕ್ಕೆ ನೇರವಾಗಿ ಸರ್ಕಾರವೇ ಕಾರಣ. 187 ಕೋಟಿ ಲೂಟಿ ಹೊಡೆದ ಸಿಎಂ ಸಿದ್ದರಾಮಯ್ಯ ರಾಜೀನಾಮೆ ನೀಡಬೇಕು. ಹಿಂದೆ ಕೆ. ಎಸ್‌. ಈಶ್ವರಪ್ಪನವರ ರಾಜೀನಾಮೆ ಕೇಳಿದ ಕಾಂಗ್ರೆಸ್‌, ಇದೀಗ ಸಚಿವರು ಹಾಗೂ ಮುಖ್ಯಮಂತ್ರಿ ರಾಜೀನಾಮೆ ಕೊಡಲಿ. ಇದರ ವಿರುದ್ಧ ಬಿಜೆಪಿ ತೀವ್ರ ಹೋರಾಟ ಮಾಡಲಿದೆ ಎಂದು ಎಚ್ಚರಿಸಿದರು.


Share