ಮಳೆಯಿಂದ ಆಗುವ ಅನಾಹುತಗಳಿಗೆ ಮುನ್ನೆಚ್ಚರಿಕೆ ಕ್ರಮಕೈಗೊಳ್ಳಿ : ಕೆ.ಎಸ್ ಲತಾ ಕುಮಾರಿ
ಹಾಸನ: ಜಿಲ್ಲೆಯಲ್ಲಿ ಮಳೆಯಿಂದ ಆಗಬಹುದಾದ ಅನಾಹುತಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳುವಂತೆ ಜಿಲ್ಲಾಧಿಕಾರಿ ಕೆ.ಎಸ್ ಲತಾ ಕುಮಾರಿ ಅವರು ಅಧಿಕಾರಿಗಳಿಗೆ ಸೂಚಿಸಿದ್ದಾರೆ.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿAದು ಜಿಲ್ಲಾ ವಿಪತ್ತು ನಿರ್ವಹಣಾ ಪ್ರಾಧಿಕಾರದ ಸಭೆ ನಡೆಸಿ ಮಾತನಾಡಿದ ಅವರು ರೈತರ ಆತ್ಮಹತ್ಯೆಯನ್ನು ತಡೆಗಟ್ಟುವ ನಿಟ್ಟಿನಲ್ಲಿ ಅಗತ್ಯ ಕ್ರಮವಹಿಸುವ ನಿಟ್ಟಿನಲ್ಲಿ ಪರಿಶೀಲಿಸುವಂತೆ ಸೂಚಿಸಿದರಲ್ಲದೆ ತಕ್ಷಣ ಪರಿಹಾರ ನೀಡಲು ಕ್ರಮವಹಿಸಿ ಎಂದರು.
ಹಾವು ಕಡಿತ ಹಾಗೂ ಆಕಸ್ಮಿಕ ಸಾವು ಕುರಿತು ಪ್ರತ್ಯೇಕ ವರದಿ ನೀಡುವಂತೆ ನಿರ್ದೇಶನ ನೀಡಿದರಲ್ಲದೆ ಪರಿಹಾರ ವಿತರಣೆಗೆ ಕ್ರಮವಹಿಸುವಂತೆ ಸೂಚಿಸಿದರು.
ಮಳೆಯಿಂದ ಹಾನಿಯಾಗಿರುವ ಕೃಷಿ ಮತ್ತು ತೋಟಗಾರಿಕೆ ಬೆಳೆಗಳ ಬಗ್ಗೆ ಪರಿಶೀಲನೆ ಮಾಡಿ ವರದಿ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ನಿರಂತರವಾಗಿ ಬೀಳುವ ಮಳೆಯಿಂದ ಹುಲ್ಲಿನ ಬಣವೆ ನೆನೆಯುವುದರಿಂದ ಫಂಗಸ್ ಆಗುವುದರಿಂದ ಜಾನುವಾರುಗಳು ತಿನ್ನಲು ಯೋಗ್ಯವಾಗಿರುವುದಿಲ್ಲ ಈ ನಿಟ್ಟಿನಲ್ಲಿ ನಿಗಾವಹಿಸಲು ಅಧಿಕಾರಿಗಳಿಗೆ ಸೂಚಿಸಿದರು.
ದೊಡ್ಡ ಜಾನುವಾರು ಸಣ್ಣ ಜಾನುವಾರುಗಳು ಆಕಸ್ಮಿಕವಾಗಿ ಸಾವು ಸಂಭವಿಸಿದಾಗ ಪರಿಹಾರ ನೀಡಲು ಕ್ರಮಕೈಗೊಳ್ಳಿ ಎಂದು ನಿರ್ದೇಶನ ನೀಡಿದರು.
ತುರ್ತು ಪರಿಸ್ಥಿತಿಯನ್ನು ನಿಭಾಯಿಸುವ ನಿಟ್ಟಿನಲ್ಲಿ ಅಗ್ನಿಶಾಮಕ ಇಲಾಖೆಗೆ ಅಗತ್ಯ ವಾಹನ ಖರೀದಿಗಾಗಿ ಅನುಮತಿ ಕೋರಿ ಸರ್ಕಾರಕ್ಕೆ ಮನವಿ ಸಲ್ಲಿಸುವಂತೆ ಸೂಚಿಸಿದರು.
ನಗರ ಪ್ರದೇಶಗಳಲ್ಲಿ ರಾಜಕಾಲುವೆಗಳು ಮತ್ತು ಚರಂಡಿಗಳನ್ನು ಸ್ವಚ್ಚತೆಗೆ ಕ್ರಮವಹಿಸಿ ಮಳೆಯ ಸಂದರ್ಭದಲ್ಲಿ ನೀರು ಸರಾಗವಾಗಿ ಹರಿಯುವಂತೆ ಕ್ರಮ ವಹಿಸುವಂತೆ ಅಧಿಕಾರಿಗಳಿಗೆ ಸೂಚಿಸಿದರು.
ಕೆರೆಕಟ್ಟೆ, ಗೋಕಟ್ಟೆ, ಬೃಹತ್ ನೀರಾವರಿಗಳ ಬಗ್ಗೆ ಪ್ರತ್ಯೇಕವಾಗಿ ಪಟ್ಟಿ ತಯಾರಿಸಿ ನೀಡುವಂತೆ ಸೂಚಿಸಿದ ಅವರು ನಗರದ ಸ್ವಚ್ಚತೆಗೆ ಹೆಚ್ಚು ಗಮನಹರಿಸಿ ನೀರು ನಿಲ್ಲದಂತೆ ಎಚ್ಚರವಹಿಸಿ ಎಂದ ಅವರು ಪ್ಲಾಸ್ಟಿಕ್ ರಸ್ತೆಗಳಲ್ಲಿ ಬಿಸಾಡುವುದನ್ನು ತಪ್ಪಿಸಲು ಕ್ರಮವಹಿಸಿ ಎಂದು ಸೂಚಿಸಿದರು.
ಮಳೆಗಾಳಿಗೆ ಬೀಳುವಂತಿರುವ ವಿದ್ಯುತ್ ಕಂಬಗಳು ಹಾಗೂ ಜೊತಾಡುವ ವಿದ್ಯುತ್ ತಂತಿಗಳನ್ನು ಗುರುತಿಸಿ ಅಗತ್ಯ ಕ್ರಮ ಕೈಗೊಳ್ಳಲು ತಿಳಿಸಿದರಲ್ಲದೆ, ವಿದ್ಯುತ್ ಕಂಬಗಳಿAದ ಅನಧಿಕೃತವಾಗಿ ವಿದ್ಯುತ್ ಸಂಪರ್ಕ ತೆಗೆದುಕೊಂಡು ಬಳಕೆ ಮಾಡಲಾಗುತ್ತಿದೆಯೇ ಗಮನಹರಿಸಿ ಯಾವುದೇ ಅವಘಡ ಸಂಭವಿಸಿದಲ್ಲಿ ಹೊಣೆಗಾರಾರು ಯಾರು ಈ ನಿಟ್ಟಿನಲ್ಲಿ ಮುನ್ನೆಚ್ಚರಿಕೆ ವಹಿಸಿ ಕ್ರಮಕೈಗೊಳ್ಳಲು ಅಧಿಕಾರಿಗಳಿಗೆ ಸೂಚಿಸಿದರು.
ಮಳೆಗಾಲದಲ್ಲಿ ಹರಡಬಹುದಾದ ಸಾಂಕ್ರಾಮಿಕ ರೋಗಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಹೆಚ್ಚು ಗಮನಹರಿಸಿ ಜನರಲ್ಲಿ ಜಾಗೃತಿ ಮೂಡಿಸುವಂತೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿಗಳಿಗೆ ಸೂಚಿಸಿದರು.
ನಾಯಿ ಹಾವಳಿ ತಡೆಗಟ್ಟುವ ನಿಟ್ಟಿನಲ್ಲಿ ಆಂದೋಲನ ರೀತಿಯಲ್ಲಿ ಸಂತಾನ ಹರಣ ಶಸ್ತçಚಿಕಿತ್ಸೆ ಮಾಡಿದಲ್ಲಿ ಮುಂದಿನ ಮೂರು ನಾಲ್ಕು ವರ್ಷಗಳಲ್ಲಿ ನಾಯಿ ಹಾವಳಿಯನ್ನು ನಿಯಂತ್ರಿಸ ಬಹುದಾಗಿದೆ ಎಂದರು.
ಶಾಲಾ ಆವರಣ, ಆಸ್ಪತ್ರೆ ಆವರಣ ಹಾಗೂ ಮತ್ತಿತರ ಕಡೆಗಳಲ್ಲಿ ಮರದ ಕೊಂಬೆಗಳು ವಿದ್ಯುತ್ ತಂತಿಗೆ ತಾಗುವಂತಿದ್ದರೆ ಅವುಗಳನ್ನು ಕತ್ತರಿಸಲು ಅರಣ್ಯ ಇಲಾಖೆ ಕ್ರಮ ಕೈಗೊಳ್ಳುವಂತೆ ತಿಳಿಸದರು.
ಯಾವುದೇ ಸಮಸ್ಯೆ ಇದ್ದರೂ ತಕ್ಷಣ ನನ್ನ ಗಮನಕ್ಕೆ ತನ್ನಿ ಎಂದು ಅಧಿಕಾರಿಗಳಿಗೆ ತಿಳಿಸಿದರು.
ಉಪ ಅರಣ್ಯ ಸಂರಕ್ಷಣಾಧಿಕಾರಿ ಸೌರಬ್ ಕುಮಾರ್, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಹೆಚ್ಚುವರಿ ಪೊಲೀಸ್ ವರಿಷ್ಠಾಧಿಕಾರಿ ತಮ್ಮಯ್ಯ ಹಾಗೂ ವಿವಿಧ ಇಲಾಖೆಗಳ ಅಧಿಕಾರಿಗಳು ಸಭೆಯಲ್ಲಿ ಹಾಜರಿದ್ದರು.
ವರದಿ ಪರ್ವಿಜ್ ಅಹಮದ್ ಹಾಸನ
