ಕಲಬುರಗಿ:- ಜಿಲ್ಲೆಯ ಜೇವರ್ಗಿ ತಾಲ್ಲೂಕಿನ ಯಡ್ರಾಮಿ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದ ಬಾಲಕಿ ಮೇಲಿನ ಅತ್ಯಾಚಾರ ಘಟನೆ ಖಂಡಿಸಿ ಮತ್ತು ಆರೋಪಿ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಲು ಆಗ್ರಹಿಸಿ ಗೋರ ಸೇನಾ ರಾಷ್ಟ್ರೀಯ ಸಂಘಟನೆ ಜಿಲ್ಲಾ ಘಟಕದ ವತಿಯಿಂದ ನಗರದಲ್ಲಿ ಇಂದು ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಲಾಯಿತು.
ಸಂಘಟನೆಯ ಜಿಲ್ಲಾ ಅಧ್ಯಕ್ಷ ಮಾನಸಿಂಗ್ ಆರ್.ಚವ್ಹಾಣ್ ಅವರ ನೇತೃತ್ವದಲ್ಲಿ ನಗರದ ಬಂಜಾರಾ ಭವನದಿಂದ ಜಿಲ್ಲಾಧಿಕಾರಿಗಳ ಕಚೇರಿಯವರೆಗೆ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿ ನಂತರ ಜಿಲ್ಲಾಧಿಕಾರಿಗಳ ಮುಖಾಂತರ ಮುಖ್ಯಮಂತ್ರಿ ಮತ್ತು ಗೃಹ ಸಚಿವರಿಗೆ ಮನವಿಪತ್ರ ಸಲ್ಲಿಸಲಾಯಿತು.
ಕಾಮುಕ ಶಿಕ್ಷಕ ಮಾಡಿರುವ ಹೇಯ ಕೃತ್ಯ ನಾಗರಿಕ ಸಮಾಜ ತಲೆ ತಗ್ಗಿಸುವಂತಾಗಿದೆ. ಹೆಣ್ಣು ಮಕ್ಕಳ ಶಿಕ್ಷಣ ಕುಂಠಿತಗೊಳ್ಳುತ್ತಿರುವ ಪ್ರಸ್ತುತ ಕಾಲಮಾನದಲ್ಲಿ ಇಂತಹ ಘಟನೆಗಳು ನಡೆದಾಗ ಪೋಷಕರು ಹೆಣ್ಣು ಮಕ್ಕಳನ್ನು ಶಾಲೆಗೆ ಕಳುಹಿಸಲು ಸಾವಿರ ಬಾರಿ ಯೋಚಿಸಬೇಕಾದಂತ ಪ್ರಸಂಗ ಒದಗಿಬಂದಿದೆ. ಈ ಕಾರಣಕ್ಕಾಗಿ ಇಂತಹ ಹೇಯ ಕೃತ್ಯವೆಸಗಿರುವ ಶಿಕ್ಷಕನಿಗೆ ಗಲ್ಲು ಶಿಕ್ಷೆ ವಿಧಿಸಬೇಕು, ಬಾಲಕಿಯ ಪೋಷಕರಿಗೆ ಆತ್ಮಸ್ಥೈರ್ಯ ತುಂಬಲು ರೂ.50 ಲಕ್ಷ ಪರಿಹಾರ ನೀಡಬೇಕು ಮತ್ತು ಬಾಲಕಿಯ ಪೋಷಕರೊಬ್ಬರಿಗೆ ಸರ್ಕಾರಿ ನೌಕರಿ ನೀಡಬೇಕು ಎಂದು ಮನವಿ ಪತ್ರದಲ್ಲಿ ಆಗ್ರಹಿಸಲಾಗಿದೆ.
ವರದಿ-ಡಾ ಎಮ್ ಬಿ ಹಡಪದ ಸುಗೂರ ಎನ್